ತುಮಕೂರು- ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ’ಶಕ್ತಿ ಯೋಜನೆ’ಗೆ ಮತ್ತು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಸಾರಿಗೆ ಅಧಿಕಾರಿಗಳಿಗೆ ಒತ್ತಾಯಿಸಿದರು.ಶನಿವಾರ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ನಗರದ ಶ್ರೀಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದ ಅವರು, ತುಮಕೂರು ನಗರದ ಶ್ರೀಕ್ಷೇತ್ರ ಸಿದ್ಧಗಂಗಾ ಮಠ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇರುವ ಧಾರ್ಮಿಕ ಕ್ಷೇತ್ರಗಳಿಗೆ ಹಾಗೂ ಪ್ರವಾಸಿ ತಾಣಗಳಿಗೆ ತೆರಳುವ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಇಲ್ಲದಿರುವುದರಿಂಧ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಸಮಯಕ್ಕೆ ಸರಿಯಾಗಿ ಸಾರಿಗೆ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಗಳು ಬರುತ್ತಿಲ್ಲ. ನಗರ ಮತ್ತು ಪಟ್ಟಣಗಳಿಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ನಿತ್ಯವೂ ತರಗತಿಯ ಮೊದಲ ಅವಧಿ ತಪ್ಪುತ್ತಿದೆ. ಇದರಿಂದ ತಮ್ಮ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಅಧಿಕಾರಿಗಳು ಕೂಡಲೇ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.ಇನ್ನು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಎಲ್ಲೆಲ್ಲಿ ಬಸ್ ಸೌಲಭ್ಯ ಕಡಿಮೆ ಇದೆಯೋ ಅಲ್ಲಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಅನುಕೂಲ ಕಲ್ಪಿಸಿ ಅವರ ವಿದ್ಯಾಭ್ಯಾಸಕ್ಕೆ ಸಹಕರಿಸಬೇಕು ಎಂದು ಹೇಳಿದ ಅವರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಪಾಸ್ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಯಶಸ್ವಿಗೆ ಕೂಡಲೇ ಖಾಲಿ ಇರುವ ಚಾಲಕ, ನಿರ್ವಾಹಕ, ತಾಂತ್ರಿಕ ಹಾಗೂ ಇತರೆ ಹುದ್ದೆಗಳನ್ನು ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಾರಂಭಿಸಬೇಕು, ಜೊತೆಗೆ ನೇಮಕಾತಿಯಲ್ಲಿ ತುಮಕೂರು ಜಿಲ್ಲೆಯ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ಒದಗಿಸುವಂತೆ ಒತ್ತಾಯಿಸಿದರು.ಮುರಳೀಧರ ಹಾಲಪ್ಪ ಅವರ ಮನವಿಗೆ ಸ್ಪಂಧಿಸಿದ ಸಾರಿಗೆ ಅಧಿಕಾರಿಗಳು ತಮ್ಮ ಒತ್ತಾಯದ ಬಗ್ಗೆ ಈಗಾಗಲೇ ಸಾರಿಗೆ ಸಚಿವರ ಕಛೇರಿಯಿಂದಲೂ ಕ್ರಮ ಕೈಗೊಳ್ಳಲು ತಿಳಿಸಿದ್ದು, ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು ತಮ್ಮ ಒತ್ತಾಯದಂತೆ ಆದಷ್ಟು ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ಕಲ್ಪಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ (ಪ್ರ) ಆಸೀಫುಲ್ಲಾ ಷರೀಫ್, ವಿಭಾಗೀಯ ಸಂಚಾರ ಅಧಿಕಾರಿ ಪರಮೇಶ್ವರಪ್ಪ, ಘಟಕ ವ್ಯವಸ್ಥಾಪಕ ತುಳಸೀರಾಮ್, ಕೆಪಿಸಿಸಿ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ರೇವಣಸಿದ್ದಯ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ವೈ.ಎನ್.ನಾಗರಾಜು, ಟೂಡಾ ಮಾಜಿ ಅಧ್ಯಕ್ಷ ಸಿದ್ದಲಿಂಗಗೌಡ, ಸಿದ್ದಗಂಗಾ ಮಠದ ವ್ಯವಸ್ಥಾಪಕರಾದ ವಿಶ್ವನಾಥಯ್ಯ, ಜಗದೀಶ್, ಮುಖಂಡರುಗಳಾದ ತರುಣೇಶ್, ಮಂಜುನಾಥ್, ನಟರಾಜು, ಗೋವಿಂದೇಗೌಡ, ರಿಜ್ವಾನ್, ಅಶ್ವತ್ಥನಾರಾಯಣ, ಆದಿಲ್ಪಾಷ, ರಘು, ಮರಿಚೆನ್ನಮ್ಮ, ಭಾಗ್ಯಮ್ಮ, ವಸುಂದರ, ಪ್ರೇಮ, ಕುಸುಮ ಮತ್ತಿತರರು ಭಾಗವಹಿಸಿದ್ದರು.