ತುಮಕೂರು:- ಯುನಿಸೆಫ್ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಚೈಲ್ಡ್ ರೈಟ್ಸ್ ಟ್ರಸ್ಟ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಅಭಿವೃದ್ಧಿ ಸಾಮಾಜಿಕ ಸೇವಾ ಸಂಸ್ಥೆ ತುಮಕೂರು, ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಬಾಲಭವನ ದಲ್ಲಿ ತುಮಕೂರು ಜಿಲ್ಲೆಯ ಮಕ್ಕಳ ಹಕ್ಕುಗಳ ಸಂಸತ್ 2023 ಹಾಗೂ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಮಾಲೋಚನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಪವಿತ್ರ ರವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಪವಿತ್ರ ರವರು, ಶಾಲೆಗಳಲ್ಲಿ ಮಕ್ಕಳಿಂದಲೇ ಮಕ್ಕಳ ಸಂಸತ್ ಮಾಡಿಕೊಂಡು ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಹಾಗೆಯೇ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಮಕ್ಕಳ ಮೂಲಕ ಮಕ್ಕಳ ಸಮಸ್ಯೆಗಳನ್ನು ಚರ್ಚಿಸಿ, ಮಕ್ಕಳಿಂದಲೇ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ತುರ್ತಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಮಕ್ಕಳ ಸಮಸ್ಯೆಗಳು ಏನೇ ಇದ್ದರೂ ಅಂಜಿಕೆ ಇಲ್ಲದೆ ಭಯಪಡದೆ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ಸಮಸ್ಯೆಗಳು ಇರುವಾಗ ಮೌನವಾಗಿದ್ದರೆ ಸಮಸ್ಯೆಗಳು ಇನ್ನೂ ಹೆಚ್ಚಾಗುತ್ತವೆ. ಮಕ್ಕಳು ಅವರ ಮನಸ್ಸನ್ನು ಹಿಡಿತದಲ್ಲಿ ಇಟ್ಟುಕೊಳ್ಳುವುದರ ಮೂಲಕ ಶಿಕ್ಷಣದ ಕಡೆ ಹೆಚ್ಚು ಗಮನವನ್ನು ಕೊಡಬೇಕು. ನಿಮಗೆ ಸಮಸ್ಯೆಗಳು ಬಂದಾಗ ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡುವ ಮುಖಾಂತರ ಸಹಾಯ ಪಡೆದುಕೊಳ್ಳಬಹುದು. ಆದರೆ ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು ಎಂದು ತಿಳಿಸಿದರು.