ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ರಿ) ತುಮಕೂರು ತಾಲ್ಲೂಕು ಘಟಕ ಹಾಗೂ ತುಮಕೂರು ತಾಲ್ಲೂಕು ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತುಮಕೂರು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಇದೆ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಜಿ ಪರಮೇಶ್ವರ್ ರವರು ಮಾತನಾಡಿ, ರಕ್ತದಾನ ಶ್ರೇಷ್ಠದಾನವಾಗಿದ್ದು ಎಲ್ಲಾ ಜಾತಿ ಧರ್ಮಗಳಿಗೂ ಮಿಗಿಲಾದ ಮಹಾ ದಾನವಾಗಿರುತ್ತದೆ .ಪ್ರತಿಯೊಬ್ಬರೂ ರಕ್ತದಾನ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಇದರಿಂದ ತುರ್ತು ಸಮಯದಲ್ಲಿ ರಕ್ತ ಅನಿವಾರ್ಯವಿದ್ದಾಗ ಸಹಾಯಕವಾಗುತ್ತದೆ . ರಕ್ತದಾನ ಮಾಡುವವರ ಮಾಹಿತಿಯನ್ನು ಸಂಗ್ರಹಿಸಿ ಅಗತ್ಯ ಸಂದರ್ಭಗಳಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿ ಸುರೇಶ್ ಗೌಡ ರವರು ಮಾತನಾಡಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಮತ್ತು ತಾಲೂಕ ಆಡಳಿತದಿಂದ ಆಯೋಜಿಸಿದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದವರಿಗೆ ಶುಭ ಹಾರೈಸಿದರು.
ಇದೇ ವೇಳೆ ಗೃಹ ಸಚಿವರು ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಿಂದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದವರಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ತುಮಕೂರು ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು,ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು,ತಾಲೂಕು ಪಂಚಾಯಿತಿ ಅಧಿಕಾರಿ ಹಾಗೂ ನೌಕರರು ಹಾಜರಿದ್ದರು .