ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ – ಸಿಎಂ ಸಿದ್ದರಾಮಯ್ಯ
ತುಮಕೂರು(ಕ.ವಾ) ಜ.29: ನಮ್ಮ ಸರ್ಕಾರ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಸಮಾಜದ ಎಲ್ಲಾ ವರ್ಗದವರ ಪರವಾಗಿದ್ದು, ಸಮ ಸಮಾಜ ನಿರ್ಮಾಣ ಮಾಡುವ ದಿಕ್ಕಿನಲ್ಲಿ ಸಾಗುತ್ತಿದೆ. ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಮತ್ತು ಈ ಯೋಜನೆಗಳ ಜಾರಿಯಿಂದಾಗಿ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದ 8 ತಿಂಗಳಲ್ಲಿ ಜಾರಿ ಮಾಡಲಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಸೇರಿದಂತೆ 5 ಯೋಜನೆಗಳಿಗೆ ಒದಗಿಸಲು ಸರ್ಕಾರದಲ್ಲಿ ಹಣವಿಲ್ಲ. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವವರಿಗೆ ಇಂದು ಜಿಲ್ಲೆಯಲ್ಲಿ ಆಯೋಜಿಸಿರುವ ಇಂತಹ ಕಾರ್ಯಕ್ರಮಗಳೇ ಉತ್ತರವಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡದೆ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ಆದರೆ ರಾಜ್ಯ ಸರ್ಕಾರವು ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರೊಂದಿಗೆ ಇನ್ಪುಟ್ ಸಬ್ಸಿಡಿಯಡಿ ಜಿಲ್ಲೆಯ 1.61 ಲಕ್ಷ ರೈತರು ಸೇರಿದಂತೆ ರಾಜ್ಯದ 29.29 ಲಕ್ಷ ರೈತರ ಖಾತೆಗೆ 2000 ರೂ.ಗಳಂತೆ ಒಟ್ಟು 555 ಕೋಟಿ ರೂ.ಗಳ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದು ವಿವರಿಸಿದರು.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಸಹ ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರದ ಬೆಲೆ ಏರಿಕೆಯಿಂದಾಗಿ ಸೃಷ್ಟಿಯಾಗಿದ್ದ ಸಂಕಷ್ಟವನ್ನು ಕಡಿಮೆ ಮಾಡುವ ಸಲುವಾಗಿ ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಕಳೆದ 2013-18ರವರೆಗಿನ ನಮ್ಮ ಸರ್ಕಾರ ನಾಡಿಗೆ ಕೊಟ್ಟಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಲಾಗಿತ್ತು.

ಈ ಬಾರಿ ಚುನಾವಣೆ ವೇಳೆಯಲ್ಲಿ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿ ಮಾಡಿದ್ದೇವೆ. ಉಳಿದ ಭರವಸೆಗಳನ್ನೂ ಈಡೇರಿಸುತ್ತಲೇ ಇದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಎಲ್ಲಾ ಜಾತಿ ಧರ್ಮದವರು ಇದ್ದಾರೆ ಎಂದು ತಿಳಿಸಿದರಲ್ಲದೆ 2023ರ ಜೂನ್ ಮಾಹೆಯಲ್ಲಿ ಜಾರಿಯಾದ ಶಕ್ತಿ ಯೋಜನೆಯಡಿ 142 ಕೋಟಿ ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
ರಾಜ್ಯದ ಬಡವರು ಹೊಟ್ಟೆತುಂಬಾ ಊಟ ಮಾಡುವ ದೃಷ್ಟಿಯಿಂದ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿ 1.28ಕೋಟಿ ಫಲಾನುಭವಿಗಳು, ಗೃಹಜ್ಯೋತಿ ಯೋಜನೆಯಡಿ 1.51ಕೋಟಿ ಕುಟುಂಬಗಳಿಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್, ಗೃಹಲಕ್ಷಿö್ಮ ಯೋಜನೆಯಡಿ 1.18 ಕೋಟಿ ಮನೆ ಯಜಮಾನಿಯರ ಖಾತೆಗೆ 2000 ರೂ., ಯುವನಿಧಿ ಯೋಜನೆಯಡಿ 4 ಲಕ್ಷ ಪದವಿ/ಡಿಪ್ಲೋಮ ಹೊಂದಿದ ನಿರುದ್ಯೋಗಿಗಳಿಗೆ 2ವರ್ಷದವರೆಗೆ ಉದ್ಯೋಗ ಭತ್ಯೆ ತಲುಪುತ್ತಿದ್ದು, ಉದ್ಯೋಗ ಭತ್ಯೆಯೊಂದಿಗೆ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ನಿರುದ್ಯೋಗಿ ಯುವಕರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ದಾರಿ ಮಾಡಿಕೊಡಲಾಗಿದೆ ಎಂದು ತಿಳಿಸಿದರು.