ಕಲಬುರಗಿ : ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ಇಂದು ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎಐಡಿಎಸ್ಓ ರಾಜ್ಯ ಉಪಾಧ್ಯಕ್ಷರಾದ ಹಣಮಂತ ಎಸ್ ಎಚ್ ಮಾತನಾಡುತ್ತಾ,
ಜೂನ್ 4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯು ಜಿ ಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್ ಟಿ ಎ ಸಮಜಾಯಿಸಿ ನೀಡಿದೆ. ಆದರೆ ಹೆಚ್ಚುವರಿ ಅಂಕಗಳು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂಬ ಆರೋಪವಿದೆ. ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಇದರ ಕುರಿತು ಸೂಕ್ತ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ಮಾತನಾಡುತ್ತಾ, ಈ ಮುಂಚೆ, ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ, ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ ಎಂದು ನಾವು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ನಮ್ಮ ಎಚ್ಚರಿಕೆಯು ಇಂದು ನಿಜವಾಗಿದೆ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರಿಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಮತ್ತು ಅಮಾಯಕ ವಿದ್ಯಾರ್ಥಿಗಳು ಇದರ ಬಲಿಪಶುಗಳಾಗಿದ್ದಾರೆ. ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತದೆ.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ, ಉಪಾಧ್ಯಕ್ಷರಾದ ಪ್ರೀತಿ ದೋಡ್ಡಮನಿ, ನಾಗರಾಜ್ ರಾವೂರ್ ಸದಸ್ಯರಾದ ಸಿದ್ದಾರ್ಥ್ ತಿಪ್ಪನೋರ, ಯುವರಾಜ ರಾಠೋಡ, ಪೂಜಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.
Neet ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ- ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!

Leave a comment
Leave a comment