ತುಮಕೂರು- ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿರುವ ತಾಲ್ಲೂಕಿನ ವಿವಿಧ ಸರ್ಕಾರಿ ಶಾಲೆಗಳ ೧೦೦ ಮಕ್ಕಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಿಂದ ಎರಡು ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಹೊರಟ ಶಾಲಾ ಮಕ್ಕಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿರುವುದು ಬಹಳ ಉತ್ತಮ ಕಾರ್ಯಕ್ರಮವಾಗಿದೆ ಎಂದರು.
ಮಕ್ಕಳಿಗೆ ಪ್ರಾಚ್ಯ ಪ್ರಜ್ಞೆ ಜಾಗೃತಿ ಮೂಡಿಸುವ ಸಲುವಾಗಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕಾರ್ಯಕ್ರಮ ಸಹಕಾರಿಯಾಗಿದೆ. ಪ್ರಾಯೋಗಿಕವಾಗಿ ಕಣ್ಣಲ್ಲಿ ನೋಡಿ ಕಲಿತಂತಹ ಅಂಶಗಳು ಮನದಟ್ಟಾಗಬೇಕು ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಈ ಕಾರ್ಯಕ್ರಮ ರೂಪಿಸಿರುವುದು ಸಂತಸದ ವಿಷಯ ಎಂದರು.
ಎಷ್ಟೇ ಮಕ್ಕಳಿಗೆ ಪ್ರಾಚೀನತೆ ಬಗ್ಗೆ ಅರಿವು ಇರುವುದಿಲ್ಲ. ಅದರಲ್ಲೂ ಬಡ ಮಕ್ಕಳಿಗೆ ಈ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಲ್ಲಿ ಅವಕಾಶ ಮಾಡಿಕೊಟ್ಟಿರುವುದು ಬಹಳ ಉಪಯುಕ್ತವಾಗಿದೆ. ಈ ಪ್ರವಾಸದಲ್ಲಿ ಎಲ್ಲ ಮಕ್ಕಳು ಸೇರುವುದರಿಂದ ಸಂವಿಧಾನದ ತತ್ವಗಳಾದ ಸಹೋದರೆ, ಸಹಕಾರ, ನಾಯಕ್ವ ಗುಣಗಳು ಅವರಲ್ಲಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕರ್ನಾಟಕ ದರ್ಶನ ಪ್ರವಾಸದಲ್ಲಿ ಚಿತ್ರದುರ್ಗ, ಹಂಪಿ, ಬಾದಾಮಿ, ಪಟ್ಟದಕಲ್ಲು, ಐಹೊಳೆ ಸೇರಿದಂತೆ ಶಿಲ್ಪಕಲೆಗಳನ್ನು ಪ್ರತಿಬಿಂಬಿಸುವ ಸ್ಥಳಗಳಿಗೆ ಮಕ್ಕಳನ್ನು ಕರೆದೊಯ್ಯುತ್ತಿರುವುದು ಅವರ ಕಲಿಕೆಗೆ ಪೂರಕವಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆ ಜಾರಿಗೆ ತಂದಿರುವ ಈ ಉಪಯುಕ್ತ ಕಾರ್ಯಕ್ರಮವನ್ನು ಮಕ್ಕಳು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.