ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್, ಮಾಜಿ ಸಚಿವ, ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ಪ್ರಾಯವಾಗಿತ್ತು. ಹಲವು ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಇಂದು ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ (ನವೆಂಬರ್ 08) ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
1936 ಆಗಸ್ಟ್ 26ರಂದು ಜನಿಸಿದ ಚಂದ್ರೇಗೌಡರು, 3 ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಒಂದು ಅವರಿಗೆ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿಯೂ ಕಾರ್ಯ ನಿರ್ವಹಿಸಿದ್ದ ಚಂದ್ರೇಗೌಡ ಅವರು, ರಾಜ್ಯ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.