ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿoದ ನಡೆಯಿತು.
ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಬೆಳಿಗ್ಗೆ 11.50ಕ್ಕೆ ಸರಿಯಾಗಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಶ್ರೀಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ರಥೋತ್ಸವದಲ್ಲಿ ಶ್ರೀಕ್ಷೇತ್ರದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಶಾಸಕ ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಡಿಷನಲ್ ಎಸ್ಪಿ ವಿ. ಮರಿಯಪ್ಪ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ, ತಹಶೀಲ್ದಾರ್ ಸಿದ್ದೇಶ್, ವಿವಿಧ ಮಠಾಧೀಶರುಗಳು ಸೇರಿದಂತೆ ಅನೇಕ ಗಣ್ಯರು, ಭಕ್ತಾದಿಗಳು ಪಾಲ್ಗೊಂಡು ರಥವನ್ನು ಮುಂದಕ್ಕೆ ಎಳೆದು ಭಕ್ತಿ ಸಮರ್ಪಿಸಿದರು.
ಇದಕ್ಕೂ ಮುನ್ನ ರಥಕ್ಕೆ ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಃ, ಕಳಸಗಳ ಆರಾಧನೆ, ರಥಾಂಗ ಪೂಜೆ ಸೇರಿದಂತೆ ವಿವಿಧ ಪೂಜೆ ಸಲ್ಲಿಸಿ ಶ್ರೀಕ್ಷೇತ್ರದ ಆರಾಧ್ಯ ದೈವ ಸಿದ್ದಲಿಂಗೇಶ್ವರಸ್ವಾಮಿಯನ್ನು ರಥಕ್ಕೆ ಕೂರಿಸಿ ರಾಜೋಪಚಾರ ಮತ್ತು ಅಷ್ಟೋತ್ತರ ಪೂಜೆ ನೆರವೇರಿಸಲಾಯಿತು. ರಥದ ಮುಂಭಾಗದಲ್ಲಿ ಜಯಾದಿ ಹೋಮ, ಗಣ ಹೋಮ, ಮೃತ್ಯುಂಜಯ ಹೋಮ ಸಹ ಮಾಡಲಾಯಿತು.