ತುಮಕೂರು: ಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಪರಿಸರಕ್ಕೆ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಪಾಲಿಸುವುದು ಸೋಂಕುಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

ಕರ್ನಾಟಕ ಅಲೈಡ್ & ಹೆಲ್ತ್ಕೇರ್ ಪ್ರೊಫೆಷನಲ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ನಾಗಾರ್ಜುನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ. ಲಿಂಗೇಗೌಡ ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ಉತ್ತಮ ಕಾರ್ಯತತ್ಪರತೆಯ ಪರಿಸ್ಥಿತಿಗಳನ್ನು ಅನಾವರಣಗೊಳಿಸುವುದು, ವೃತ್ತಿಜೀವನದ ನಿರಂತರ ಜ್ಞಾನದ ಉನ್ನತೀಕರಣ, ಮಾಹಿತಿ ಮತ್ತು ಆಲೋಚನೆಗಳು, ಜ್ಞಾನ, ಅನುಭವಗಳು ಮತ್ತು ಉತ್ತಮ ಅಭ್ಯಾಸಗಳ ಕಲಿಕೆಗೆ ಕಾರ್ಯಾಗಾರಗಳು ಅನುಕೂಲವಾಗುತ್ತವೆ ಎಂದರು.
ಸಾಹೇ ರಿಜಿಸ್ಟರ್ ಡಾ.ಅಶೋಕ್ ಮೆಹ್ತಾ ಮಾತನಾಡಿ, ಆಸ್ಪತ್ರೆಯ ವ್ಯವಸ್ಥೆಯಲ್ಲಿ, ಪ್ರಯೋಗಾಲಯದಲ್ಲಿ ಗುಣಮಟ್ಟ ನಿಯಂತ್ರಣ , ವಿಶ್ವಾಸಾರ್ಹ ಮತ್ತು ಸಕಾಲಿಕ ಫಲಿತಾಂಶಗಳನ್ನು ಖಚಿತಪಡಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ವೃತ್ತಿಪರ ಕಾರ್ಯಕತರ ಮೇಲೆ ಕೇಂದ್ರೀಕರಿಸುತ್ತದೆ. ರೋಗಿಗಳ ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕು ಎಂದರು.