ತುಮಕೂರು(ಕ.ವಾ.)ಅ.೧೦: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವಾಗ ಸೋಲು-ಗೆಲುವುಗಳನ್ನು ಲೆಕ್ಕಿಸದೆ ಕ್ರೀಡಾಸ್ಪೂರ್ತಿಯಿಂದ ಆಟ ಆಡಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ವೋದಯ ವಿದ್ಯಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ಸರ್ವೋದಯ ಪ್ರೌಢಶಾಲಾ ಮೈದಾನದಲ್ಲಿಂದು ೨೦೨೩-೨೪ನೇ ಸಾಲಿನ ೧೪/೧೭ ವರ್ಷ ವಯೋಮಿತಿಯ ಬಾಲಕ/ಬಾಲಕಿಯರ ಬೆಂಗಳುರು ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಮ್ಮ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿ ನಡೆಯುತ್ತಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ. ಕ್ರೀಡಾಕೂಟವನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ
ಸರ್ವೋದಯ ವಿದ್ಯಾ ಸಂಸ್ಥೆಯ ವತಿಯಿಂದ ಯಾವುದೇ ಅಡಚಣೆಯಾಗದ ರೀತಿಯಲ್ಲಿ ತುಂಬಾ ವ್ಯವಸ್ಥಿತವಾಗಿ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.ಈ ಕ್ರೀಡಾ ಕೂಟದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಮಧುಗಿರಿ ಶೈಕ್ಷಣಿಕ ಜಿಲ್ಲೆ ಹಾಗೂ ತುಮಕೂರು ದಕ್ಷಿಣ ಜಿಲ್ಲೆ ಸೇರಿದಂತೆ ಒಟ್ಟು ೪೪ ತಂಡಗಳಿAದ ಸುಮಾರು ೭೦೦ ಕ್ರೀಡಾಪಟುಗಳು ಭಾಗವಹಿಸಿದ್ದಾರೆ ಎಂದು ಹೇಳಿದರು. ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದ ಧ್ವಜಾರೋಹಣವನ್ನು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ವಿಷ್ಣುವರ್ಧನ್ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಂಗಧಾಮಯ್ಯ, ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಬ್ಬಾರಾಯ, ಕಾರ್ಯದರ್ಶಿ ಜಿ.ಸೀತಾರಂ, ಜಂಟಿ ಕಾರ್ಯದರ್ಶಿ ಕೆ.ವಿ.ಸುಬ್ಬಾರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಸೂರ್ಯಕಲಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ.ಪರಮೇಶ್ವರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.