ತುಮಕೂರು: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ೧೨ ಸಾವಿರ ರೂಪಾಯಿ ಜೊತೆಗೆ ರಾಜ್ಯ ಸರ್ಕಾರ ೩ ಸಾವಿರ ರೂಪಾಯಿ ಸೇರಿಸಿ ಕೊಬ್ಬರಿ ಖರೀದಿಸಲು ನಾಫೆಡ್ ಮೂಲಕ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಸೋಮವಾರ ಟೌನ್ಹಾಲ್ ವೃತ್ತದಿಂದ ಮೆರವಣಿಗೆಯಲ್ಲಿ ಆಗಮಿಸಿದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಆರಂಭಿಸಿದರು. ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, ಕೇಂದ್ರ ಸರ್ಕಾರ ನಿಗಧಿ ಮಾಡಿರುವ ೧೨ ಸಾವಿರ ರೂ.ಗಳ ಜೊತೆಗೆ ರಾಜ್ಯ ಸರ್ಕಾರ ೩ ಸಾವಿರ ರೂ. ಸೇರಿಸಿ ನಾಪೆಡ್ ಕೇಂದ್ರದ ಮೂಲಕ ಖರೀದಿಸಲು ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಬಿಡದೆ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ರೈತರು, ಕಾರ್ಮಿಕರು, ಸೈನಿಕರು ಉಳಿದರೆ ಮಾತ್ರ ದೇಶದ ಅಭಿವೃದ್ಧಿ. ಹೀಗಿರುವಾಗ ಸರ್ಕಾರಗಳು ರೈತರನ್ನು ಕಡೆಗಣಿಸುತ್ತಲೇ ಬರುತ್ತಿವೆ. ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚು ಮಾಡಬೇಕು ಎಂದು ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಸರ್ಕಾರಗಳು ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ. ಸಮರ್ಪಕ ನಿರ್ಧಾರ ಪ್ರಕಟಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ವಿದೇಶಗಳಿಂದ ಕೊಬ್ಬರಿ ಎಣ್ಣೆ ಹಾಗೂ ಪೌಡರ್ ಆಮದನ್ನು ಸರ್ಕಾರ ನಿಲ್ಲಿಸದ ಕಾರಣ ಕೊಬ್ಬರಿ ಬೆಲೆ ಕುಸಿಯಲು ಕಾರಣವಾಗಿದೆ. ಸರ್ಕಾರಗಳಿಗೆ ತೆಂಗು ಬೆಳೆಗಾರರ ಹಿತಕಾಯುವ ಕಾಳಜಿಯಿಲ್ಲ. ಅರಸಿಕೆರೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿ ತೆಂಗು ಬೆಳೆಗಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಆದರೆ ತೆಂಗು ಬೆಳೆಗಾರರ ಪರವಾಗಿ ಜಿಲ್ಲೆಯ ಯಾವೊಬ್ಬ ಶಾಸಕರೂ ಅಧಿವೇಶನದಲ್ಲಿ ಧ್ವನಿ ಎತ್ತಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಧನಂಜಯಾರಾಧ್ಯ ಮಾತನಾಡಿ, ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗಧಿಮಾಡಿ ಸರ್ಕಾರ ಖರೀದಿ ಮಾಡಿ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸದಿದ್ದರೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಡುವುದಾಗಿ ಎಚ್ಚರಿಕೆ ನೀಡಿದರು.