ತುರುವೇಕೆರೆ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರಿಂದ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅದೇ ಗ್ರಾಮದ ರೈತ ಬಸವಲಿಂಗಯ್ಯ ಅವರ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಪ್ರತಿ ನಿತ್ಯ ರಾತ್ರಿ ಆಹಾರ ಇಡಬೇಕು. ಆಹಾರವನ್ನರಸಿ ಬರುವ ಚಿರತೆ ಬೋನಿನಲ್ಲಿ ಸೆರೆಯಾಗಲಿದೆ ಎಂದು ವಲಯ ಅರಣ್ಯಾಧಿಕಾರಿ ಸಿ.ಆರ್. ಅರುಣ್ ಅವರಿಗೆ ನಿರ್ದೇಶನ ನೀಡಿದರಲ್ಲದೆ, ಸಂಜೆ ವೇಳೆ ನಂತರ ಈ ಪ್ರದೇಶದಲ್ಲಿ ಒಂಟಿಯಾಗಿ ತಿರುಗಾಡಬಾರದು. ಮಕ್ಕಳನ್ನು ಹೊರಗಡೆ ಬಿಡಬಾರದೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಬಳಿಕ ತುರುವೇಕೆರೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿ ಹಾಗೂ ಗ್ರಾಮಲೆಕ್ಕಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಸರ್ಕಾರಿ ಸೌಲಭ್ಯಗಳಿಗಾಗಿ ಸ್ವೀಕೃತ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ವಿಲೇವಾರಿ ಮಾಡದೆ ನೆಪ ಹೇಳುವ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು
ದಾಖಲೆಗಳು ಸರಿಯಾಗಿದ್ದರೂ ಅರ್ಜಿಗಳನ್ನು ಬಾಕಿ ಉಳಿಸಿಕೊಂಡು ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡುವ ಗ್ರಾಮ ಲೆಕ್ಕಾಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಲಾಗುವುದು. ಬುಧವಾರ ಜನವರಿ 31ರಂದು ಮತ್ತೊಮ್ಮೆ ಗ್ರಾಮ ಲೆಕ್ಕಾಧಿಕಾರಿಗಳ ಸಭೆ ನಡೆಸಲಾಗುವುದು. ಅಷ್ಟರೊಳಗಾಗಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬೇಕೆಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ನಂತರ ತಿಪಟೂರು ತಾಲ್ಲೂಕು ನೊಣವಿನಕೆರೆ ನಾಡ ಕಚೇರಿಗೆ ಭೇಟಿ ನೀಡಿ ನಿಗಧಿತ ಶುಲ್ಕ ಮಾತ್ರ ಪಡೆದು ಜಾತಿ/ಆದಾಯ ಪ್ರಮಾಣ ಪತ್ರ ನೀಡಬೇಕು. ಆರ್ಆರ್ಟಿ, ಖರಾಬು, ಪಹಣಿ ತಿದ್ದುಪಡಿ, ಆಕಾರ್ ಬಂದ್ ಅರ್ಜಿಗಳ ವಿಲೇವಾರಿ ಬಗ್ಗೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪವಿಭಾಗಾಧಿಕಾರಿ ಸಪ್ತಶ್ರೀ, ಮತ್ತಿತರರು ಉಪಸ್ಥಿತರಿದ್ದರು.