ತುಮಕೂರು: ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ತಿಂಗಳ 18ರಂದು ನಡೆಯುವ ಸಚಿ ಸಂಪುಟ ಸಭೆ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಸಂಬoಧ ತೀರ್ಮಾನ ಮಾಡಬೇಕು, ತಪ್ಪಿದಲ್ಲಿ ರಾಜ್ಯಾದ್ಯಂತ ಮುಖ್ಯಮಂತ್ರಿ, ಮಂತ್ರಿಗಳನ್ನು ಘೇರಾವ್ ಮಾಡಲಾಗುವುದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸುರಿಯುವ ಮಳೆಯಲ್ಲೂ ಪ್ರತಿಭಟನಾಕಾರರು ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಒಳ ಮೀಸಲಾತಿ ವರ್ಗೀಕರಣ ಜಾರಿಗೆ ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.