ತುಮಕೂರು-ಜಿಲ್ಲಾ ಜನಜಾಗೃತಿ ವೇದಿಕೆ – ತುಮಕೂರು- ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯ ತುಮಕೂರು-1 ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯನ್ನು ಉಪಾಧ್ಯಕ್ಷರಾದ ಅಮರನಾಥ ಶೆಟ್ಟಿ, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಇದುವರೆಗೂ ತುಮಕೂರು-1 ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಇತ್ತೀಚೆಗೆ ನಿಧನರಾದ ಪ್ರೆಸ್ ರಾಜಣ್ಣ ಅವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಬೆಂಗಳೂರು ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಅವರು ಕ್ರಿಯಾ ಯೋಜನೆ ಅನುಷ್ಠಾನದ ಕುರಿತು ಮಾಹಿತಿ ನೀಡಿ, ಜನಜಾಗೃತಿ ಕಾರ್ಯಕ್ರಮಗಳಾದ ಮದ್ಯವರ್ಜನ ಶಿಬಿರ, ನವ ಜೀವನ ಸಮಿತಿ ಬಲಪಡಿಸುವಿಕೆ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ, ಗಾಂಧಿ ಜಯಂತಿ ಕಾರ್ಯಕ್ರಮ ಸೇರಿದಂತೆ ಇನ್ನಿತರ ಜನಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಉತ್ತಮ ರೀತಿಯಲ್ಲಿ ನಡೆಸುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ತುಮಕೂರು-1 ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಅಮರನಾಥ್ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಗಣೇಶ್ ಪ್ರಸಾದ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಿಗೆ ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಲಾಯಿತು. ಹಾಗೆಯೇ ವೇದಿಕೆಯ ಪದಾಧಿಕಾರಿಗಳಿಗೆ ಸಂಪೂರ್ಣ ಸುರಕ್ಷಾ ಕಾರ್ಡ್ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ದಯಾಶೀಲ, ಪ್ರಾದೇಶಿಕ ಜನಜಾಗೃತಿ ಯೋಜನಾಧಿಕಾರಿ ತಿಮ್ಮಯ್ಯ ನಾಯಕ್, ಜಿಲ್ಲಾ ವ್ಯಾಪ್ತಿಯ ವೇದಿಕೆಯ ಪದಾಧಿಕಾರಿಗಳು ಮತ್ತು ಜಿಲ್ಲಾ ವ್ಯಾಪ್ತಿ ಯೋಜನೆಯ ಯೋಜನಾಧಿಕಾರಿಗಳು, ಜನಜಾಗೃತಿ ಮೇಲ್ವಿಚಾರಕರು ಭಾಗವಹಿಸಿದ್ದರು.