ತುಮಕೂರು- ಹೇಮಾವತಿ ಎಕ್ಸ್ಪ್ರೆಕ್ಸ್ ಲಿಂಕ್ ಕೆನಾಲ್ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಯಿಂದ ಜಿಲ್ಲೆಗೆ ಏನೆಲ್ಲಾ ತೊಂದರೆಯಾಗುತ್ತದೆ ಎಂಬುದರ ಬಗ್ಗೆ ನಾನು ಮತ್ತು ಸಚಿವ ರಾಜಣ್ಣನವರು ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ. ಆದರೆ ಸಂಪುಟ ನಮ್ಮೊಬ್ಬರದ್ದೇ ಅಲ್ಲವಲ್ಲ ಎಂದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಚಿವ ಸಂಪುಟದಲ್ಲಿ ವಿಷಯ ಪ್ರಸ್ತಾಪವಾಗಿ ಈ ಲಿಂಕ್ ಕೆನಾಲ್ ಮಾಡಬಹುದು ಎಂದು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದು ಸರ್ಕಾರದ ತೀರ್ಮಾನ, ನನ್ನ ತೀರ್ಮಾನವಲ್ಲ ಎಂದು ಸ್ಪಷ್ಟಪಡಿಸಿದರು.
ತುಮಕೂರು ಜಿಲ್ಲೆಗೆ ಕುಡಿಯುವ ನೀರು ಮತ್ತು ನಾಲೆಯಲ್ಲಿ ಹೇಮಾವತಿ ಡ್ಯಾಮ್ನಿಂದ 25 ಟಿಎಂಸಿ ನೀರು ಕೊಟ್ಟಿದ್ದಾರೆ. ಆದರೆ ಹಾಸನ ಜಿಲ್ಲೆಯಿಂದ 18 ರಿಂದ 19 ಟಿಎಂಸಿ ನೀರು ನಮ್ಮ ಜಿಲ್ಲೆಗೆ ಇದುವರೆಗೂ ಬಂದಿಲ್ಲ. ಸುಮಾರು 14 ರಿಂದ 15 ಟಿಎಂಸಿ ನೀರು ಬಂದಿರಬಹುದು ಅಷ್ಟೇ ಎಂದರು.
ಗುಬ್ಬಿ ತಾಲ್ಲೂಕ, ತುರುವೇಕೆರೆ, ತಿಪಟೂರಿಗೆ ಕುಡಿಯುವ ನೀರಿಗೆ ಹಂಚಿಕೆಯಾಗಿದೆ. ಇಲ್ಲಿಂದ ಮುಂದೆ ಕುಣಿಗಲ್ ಕೆರೆಗೂ ಹೋಗಲು ಅವಕಾಶ ಮಾಡಿಕೊಡಲಾಗಿದೆ. ಮಧ್ಯೆದಲ್ಲಿ ಹೆಬ್ಬೂರಿಗೂ ಏತನೀರಾವರಿ ಮೂಲಕ ನೀರು ಹರಿಸಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಗುಬ್ಬಿ ತಾಲ್ಲೂಕಿನ ಡಿ. ರಾಂಪುರದ ಬಳಿ ಇರುವ 70ನೇ ಕಿ.ಮೀ.ನಿಂದ ನೇರವಾಗಿ ಕುಣಿಗಲ್ಗೆ ನೀರು ತೆಗೆದುಕೊಂಡು ಹೋಗಬೇಕೆಂದು ಕಳೆದ ಐದಾರು ವರ್ಷಗಳಿಂದ ಪ್ರಸ್ತಾವನೆ ಇದೆ. ಇದಕ್ಕೆ ಪರ-ವಿರೋಧ ವ್ಯಕ್ತವಾಗಿದೆ. ಈ ಬಾರಿ ಸಂಪುಟದಲ್ಲಿ ವಿಷಯ ಮಂಡಿಸಿ, ಸರ್ಕಾರ ಎಕ್ಸ್ಪ್ರೆಸ್ ಕೆನಾಲ್ ಮಾಡಬಹುದು ಎಂದು ತೀರ್ಮಾನ ತೆಗೆದುಕೊಂಡಿದೆ ಎಂದರು.
ಈ ಮಧ್ಯೆ ರೈತರು ಈ ಎಕ್ಸ್ಪ್ರೆಸ್ ಕೆನಾಲ್ ಕೆಲಸ ಆಗಬಾರದು ಎಂದು ತಡೆದು ನಿಲ್ಲಿಸಿದ್ದಾರೆ. ತಹಶೀಲ್ದಾರ್ಗೆ ಮನವಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟು ಮುಖ್ಯಮಂತ್ರಿಗಳೊoದಿಗೆ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬೇಕಾಗಿದೆ ಎಂದರು.